ಗ್ರಾಮೀಣ ಕ್ಷೇತ್ರವನ್ನು ತಲೆಎತ್ತಿ ನೋಡುವಂತೆ ಮಾಡುವೆ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ತಾರತಮ್ಯವಿಲ್ಲದೆ ಎಲ್ಲ ಗ್ರಾಮಗಳ ಅಭಿವೃದ್ಧಿ ಮಾಡುತ್ತೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ತಲೆಎತ್ತಿ ನೋಡುವಂತೆ ಮಾಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶಪಥ ಮಾಡಿದ್ದಾರೆ.
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಹಿರೇ ಬಾಗೇವಾಡಿ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿರುವ ‘ಭಾರತ ನಿರ್ಮಾಣ ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗೂ ಹಿರೇ ಬಾಗೇವಾಡಿಯ ನೂತನ ಗ್ರಾಮ ಪಂಚಾಯತ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಗ್ರಾಮ ಪಂಚಾಯಿತಿಗಳು ಬಲಿಷ್ಠಗೊಂಡರೆ ಮಹಾತ್ಮ ಗಾಂಧೀಜಿ ಅವರ ಕನಸು ನನಸಾದಂತೆ ಎಂದರು.
ಗ್ರಾಮ ಪಂಚಾಯಿತಿಗಳನ್ನು ಬಲಿಷ್ಠಗೊಳಿಸುವುದು, ಸ್ಥಳೀಯರಿಗೆ ಅಧಿಕಾರ ನೀಡಿ, ಅವರಿಗೆ ಶಕ್ತಿ ತುಂಬಬೇಕು ಎಂಬುದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಉದ್ದೇಶವಾಗಿತ್ತು. ಅವರ ದೂರದೃಷ್ಟಿಯ ಫಲವಾಗಿ ಇಂದು ಪಂಚಾಯತಿಗಳಿಗೆ ಹೆಚ್ಚು ಅನುಧಾನ ಬರುವಂತಾಗಿದೆ. ಹಿರೇಬಾಗೇವಾಡಿ ಗ್ರಾಮದ ಬಗ್ಗೆ ನನಗೆ ವಿಶೇಷ ಅಭಿಮಾನವಿದ್ದು, ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ಸಚಿವರು ಹೇಳಿದರು.