
ಬೆಂಗಳೂರು: ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಪದ್ಧತಿಯನ್ನು ಜಾರಿಗೆ ತರಲು ಕಾನೂನು ರೂಪಿಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾತಿ ಜನಗಣತಿ ಮಾಡುವುದಾಗಿ ಘೋಷಣೆ ಮಾಡಿರುವುದನ್ನು ಸ್ವಾಗತಿಸುವುದಾಗಿ ತಿಳಿಸಿದರು.
ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡುವುದಾಗಿ ಘೋಷಣೆ ಮಾಡಿದೆ. ಅದಕ್ಕಿಂತ ಮೊದಲು ಯುಪಿಎ ಸರ್ಕಾರ 2010ರ ಸೆಪ್ಟೆಂಬರ್ನಲ್ಲಿ ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಆರಂಭಿಸಿತ್ತು. ಆಗ ನಾನು ಕಾರ್ಮಿಕ ಹಾಗೂ ಸಮಾಜ ಕಲ್ಯಾಣ ಸಚಿವನಾಗಿದ್ದೆ. 2016ರಲ್ಲಿ ಜಾತಿಗಣತಿ ಮುಗಿದಿದೆ. ಆದರೆ ಬಿಜೆಪಿ ಸರ್ಕಾರ ಆ ವರದಿಯನ್ನು ಈವರೆಗೂ ಬಹಿರಂಗಪಡಿಸಿಲ್ಲ ಮತ್ತು ಜಾರಿಗೂ ತಂದಿಲ್ಲ. ಇಂತಹ ಒಳ್ಳೆಯ ಕೆಲಸಗಳ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಿಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.