Uncategorized
ಪಕ್ಕದ ಮನೆ ಯುವತಿಯೊಡನೆ ಅಫೇರ್ – ಪ್ರಶ್ನಿಸಿದ್ದಕ್ಕೆ ಪತ್ನಿಯ ಕಗ್ಗೊ*ಲೆ!

ಪಕ್ಕದ ಮನೆ ಯುವತಿಯೊಡನೆ ಅಫೇರ್ – ಪ್ರಶ್ನಿಸಿದ್ದಕ್ಕೆ ಪತ್ನಿಯ ಕಗ್ಗೊ*ಲೆ!
ಬೀದರ್: ಪಕ್ಕದ ಮನೆಯ ಯುವತಿ ಜೊತೆಗಿನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಕಾರಣಕ್ಕೆ ಪತಿಯೇ ತನ್ನ ಪತ್ನಿಯ ಮೇಲೆ ಕಬ್ಬಿಣದ ರಾಡ್ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ನಿವಾಸಿಯಾದ 26 ವರ್ಷದ ಸಂಜನಾ ಕೊಲೆಯಾದ ದುರ್ದೈವಿ. ಈಕೆಯ ಪತಿ ಭಗವತ್ ಜ್ಞಾನೇಶ್ವರ ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಗವತ್, ಪತ್ನಿ ಸಂಜನಾ ಜೊತೆ ಬೀದರ್ನ ಶಿವನಗರದಲ್ಲಿ ವಾಸವಾಗಿದ್ದನು. ಇವರಿಬ್ಬರಿಗೂ ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಆದರೆ, ಇತ್ತೀಚೆಗೆ ಭಗವತ್ ಪಕ್ಕದ ಮನೆಯ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.
ಈ ವಿಷಯ ಪತ್ನಿ ಸಂಜನಾಗೆ ತಿಳಿದು, ಆಕೆ ಪತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಇದೇ ವಿಚಾರವಾಗಿ ಇಬ್ಬರ ನಡುವೆ ಭೀಕರ ಜಗಳ ನಡೆದಿದೆ. ಇದರಿಂದ ಆಕ್ರೋಶಗೊಂಡ ಭಗವತ್, ಜೂನ್ 29ರಂದು ಪತ್ನಿಯನ್ನು ಕಾರಿನಲ್ಲಿ ಹೊನ್ನಿಕೇರಿ ಅರಣ್ಯ ಪ್ರದೇಶದ ಗಾಯಮುಖ ದೇವಸ್ಥಾನದ ಬಳಿಗೆ ಕರೆದೊಯ್ದಿದ್ದಾನೆ. ಅಲ್ಲಿ ಯಾರೂ ಇಲ್ಲದ ನಿರ್ಜನ ಪ್ರದೇಶದಲ್ಲಿ ಕಬ್ಬಿಣದ ರಾಡ್ನಿಂದ ಸಂಜನಾ ಅವರ ತಲೆ ಮತ್ತು ಕತ್ತಿನ ಭಾಗಕ್ಕೆ ಮನಬಂದಂತೆ ಜಜ್ಜಿದ್ದಾನೆ.
ಮಾರಣಾಂತಿಕ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂಜನಾ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಆಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮಗಳ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



