ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ

ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಹಾಗೆಯೇ, ಚಿತ್ರನಗರಿ ಘೋಷಣೆ ಮಾಡಿರುವ ಅನುದಾನದ ಬಿಡುಗಡೆಗೆ ಕ್ರಮಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗ ಉಳಿವಿಗಾಗಿ ʻಸಮಗ್ರ ಹೊಸ ಚಲನಚಿತ್ರ ನೀತಿʼ ಸೇರಿದಂತೆ ʻಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳʼ, ʻಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿʼ, ʻಏಕಪರದೆ ಚಿತ್ರಮಂದಿರಗಳ ನವೀಕರಣʼ, ʻಆಧುನೀಕರಣಕ್ಕೆ ವಿಶೇಷ ನೆರವುʼ, ʻಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ ಬಿಡಿಎಯಿಂದ 5 ಎಕರೆ ಭೂಮಿʼ ನೀಡುವಂತೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲಾ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.
ಚಲನಚಿತ್ರ ವಾಣಿಜ್ಯ ಮಂಡಳಿಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ, ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂಬುದನ್ನ ಆಲೋಚನೆ ಮಾಡುತ್ತೇವೆ. ಹೊಸ ಚಲನಚಿತ್ರ ನೀತಿ ತರಲು ಚರ್ಚಿಸುತ್ತೇವೆ. ಸಹಾಯಧನ ಹೆಚ್ಚಳ, ಪ್ರಾಚ್ಯಾಗಾರ ಪ್ರಾರಂಭಿಸಲು ಹಾಗೂ ಈ ವರ್ಷದ ಚಲನಚಿತ್ರ ಪ್ರಶಸ್ತಿ ಪ್ರಕ್ರಿಯೆ ಪ್ರಾರಂಭಿಸಿಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಚಿತ್ರನಗರಿ ನಿರ್ಮಾಣಕ್ಕೆ ಘೋಷಣೆ ಮಾಡಿರುವ ಅನುದಾನದ ಬಿಡುಗಡೆಯ ಬಗ್ಗೆ ಹಣಕಾಸು ಇಲಾಖೆಯ ಎಸಿಎಸ್ ಅವರನ್ನು ಉಲ್ಲೇಖಿಸಿ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.



