ವಿಜಯಪುರ

ಬಡ ಕೂಲಿಕಾರ್ಮಿಕರ ಮೇಲೆ ಹಲ್ಲೆ,ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ: ಸಿ.ಎಂ

ವಿಜಯಪುರ: ಇಟ್ಟಿಗೆ ಭಟ್ಟಿಯ ಮಾಲೀಕ ಹಾಗೂ ಇತರ ಮೂವರು ಸೇರಿಕೊಂಡು ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಹೊರಭಾಗದ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ. ಈ ಸಂಬಂಧ ಖೇಮು ರಾಠೋಡ, ಸಚಿನ ಮಾನವರ, ವಿಶಾಲ ಜುಮನಾಳ, ರೋಹನ್ ಗಾಂಧಿನಗರ ಮತ್ತು ಕನಕಮೂರ್ತಿ ಗೊಂದಳಿ ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಗಡ ಹಣ ಪಡೆದಿದ್ದರ ಕೆಲಸ ಮಾಡುವ ವಿಚಾರದ ಕುರಿತು ಮೂವರು ಕಾರ್ಮಿಕರ ಕಾಲುಗಳನ್ನು ಕಟ್ಟಿ ಪೈಪ್​ಗಳಿಂದ ಪಾದಗಳಿಗೆ ಥಳಿಸಲಾಗಿದೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಮತ್ತು ಸಹಚರರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವಿಜಯಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, “ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಖೇಮು ರಾಠೋಡ ಸೇರಿ ಐವರನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಜಮಖಂಡಿ ಮೂಲದ ಕಾರ್ಮಿಕರು ಇಟ್ಟಿಗೆ ಭಟ್ಟಿಯ ಕೆಲಸಕ್ಕೆಂದು ಇಲ್ಲಿಗೆ ಬಂದಿದ್ದರು. ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋದವರು ವಾಪಸ್ ಬರುವುದು ತಡವಾದ ಕಾರಣಕ್ಕೆ ಖೇಮು ರಾಠೋಡ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ಅಪರಾಧಿಗಳನ್ನು ಗರಿಷ್ಠ ಶಿಕ್ಷೆಗೆ ಒಳಪಡಿಸುವ ನಿಟ್ಟಿನಲ್ಲಿ ಕ್ರಮ – ಸಿಎಂ :

 ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ, ”ವಿಜಯಪುರದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ನಡೆದ ಹಲ್ಲೆ ಅಮಾನವೀಯ ಮಾತ್ರವಲ್ಲ, ಘೋರ ಅಪರಾಧವೂ ಹೌದು. ಬಡ ಕೂಲಿಕಾರ್ಮಿಕರ ಮೇಲೆ ಹಲ್ಲೆ ಮಾಡಿದ ದುರುಳರನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ತನಿಖೆ ನಡೆಸಿ, ಅಪರಾಧಿಗಳನ್ನು ಗರಿಷ್ಠ ಶಿಕ್ಷೆಗೆ ಒಳಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು” ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button