ಬೆಂಗಳೂರು

ದೆಹಲಿಗೆ ತೆರಳಿರುವ ಬಿ. ವೈ ವಿಜಯೇಂದ್ರ ನಡೆ ಕುತೂಹಲ ಮೂಡಿಸಿದೆ.

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಒಂದೆಡೆ ಬಣ ಬಡಿದಾಟ, ಮತ್ತೊಂದೆಡೆ ಬಿಜೆಪಿ ನಾಯಕರಾದ ಜನಾರ್ದನರೆಡ್ಡಿ ಹಾಗೂ ಶ್ರೀರಾಮುಲು ನಡುವಿನ ಮನಸ್ತಾಪದ ಸ್ಫೋಟದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. ಇಬ್ಬರ ನಡುವೆ ಸಂಧಾನ ನಡೆಸಲು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ವರದಿಯಾಗಿದೆ.

ದೆಹಲಿಗೆ ಇಂದು ತೆರಳಿದ ವಿಜಯೇಂದ್ರ ಅವರು, ಪಕ್ಷದ ಕೆಲ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮಾಜಿ ಸಚಿವರಾದ ಜರ್ನಾದನ ರೆಡ್ಡಿ, ಶ್ರೀರಾಮುಲು ನಡುವಿನ ಜಗಳ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬೀದಿ ರಂಪಾಟದ ನಡುವೆ ವಿಜಯೇಂದ್ರ ದಿಢೀರನೇ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಮೂಡಿಸಿದೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕೆಂದು ಒಂದು ಬಣ ಪಟ್ಟು ಹಿಡಿದಿದೆ. ಇದರ ನಡುವೆ ಜಿಲ್ಲಾಧ್ಯಕ್ಷರ ನೇಮಕಾತಿ, ಪದಾಧಿಕಾರಿಗಳ ನೇಮಕ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಸನಗೌಡ ಪಾಟೀಲ್ ಯತ್ನಾಳ್ ಬಣದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಕಣಕ್ಕಿಳಿಸುವ ಸುಳಿವು ನೀಡಿದ್ದು, ಆದರೆ ವಿಜಯೇಂದ್ರ ಅವಿರೋಧವಾಗಿ ಆಯ್ಕೆಯಾಗಲು ರಣತಂತ್ರ ರೂಪಿಸಿದ್ದಾರೆ. ಈ ಬೆಳವಣಿಗೆಗಳ ನಡುವೆಯೇ ವಿಜಯೇಂದ್ರ ಅವರು ದೆಹಲಿಗೆ ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಅವರು ತಮ್ಮ ಸ್ವಂತ ಕೆಲಸಕ್ಕೆ ದೆಹಲಿಗೆ ತೆರಳಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

Related Articles

Leave a Reply

Your email address will not be published. Required fields are marked *

Back to top button