ಬೆಂಗಳೂರು

ಜ.27ರಿಂದ ಅನಾವರಣಗೊಳ್ಳಲಿದೆ ಭುವನೇಶ್ವರಿ ಕಂಚಿನ ಪ್ರತಿಮೆ.

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆಯು ಜ.27ರಿಂದ ಅನಾವರಣಗೊಳ್ಳಲಿದೆ.

ಈ ಬಗ್ಗೆ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ, ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜ.27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಬ್ಬದ ವಾತಾವರಣದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಾರಿಗೆ ಬಸ್​​ನಲ್ಲಿ ಹಾರಾಡಲಿದೆ ಕನ್ನಡದ ಧ್ವಜ: ಸ್ಥಳೀಯ ಬಿಬಿಎಂಪಿಯನ್ನು ಮೆರವಣಿಗೆಗೆ ಬಳಸಿಕೊಳ್ಳಲಾಗಿದ್ದು, ಅಂದು ಬಿಎಂಟಿಸಿ ಹಾಗೂ ಕೆಎಸ್​​ಆರ್​​ಟಿಸಿ ಬಸ್​​ಗಳಲ್ಲಿ ಕನ್ನಡದ ಧ್ವಜ ಹಾರಾಡಲಿದೆ. ಉಚಿತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದರು.‌

ಹೊಯ್ಸಳ ಶೈಲಿಯ ಪೀಠ ನಿರ್ಮಾಣ: ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ‌. ಮುಂಭಾಗದಲ್ಲಿ‌ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ. ನಾವು ಅದುಕೊಂಡಿದ್ದಕ್ಕಿಂತ ಚೆನ್ನಾಗಿ ಪ್ರತಿಮೆ ಮೂಡಿಬಂದಿದೆ ಎಂದು ಸಚಿವರು ಹೇಳಿದರು.

ಪ್ರತಿಮೆಯ ಸುತ್ತಲೂ ಉದ್ಯಾನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button