ವೃದ್ಧರು ಮತ್ತು ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಸಿದ್ರೇ… ಮೈಕ್ರೋ ಫೈನಾನ್ಸಗಳ ವಿರುದ್ಧ ಕ್ರಮ; ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ.

ಇಂದು ಸಿಎಂ ಸಿದ್ಧರಾಮಯ್ಯನವರು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಸಭೆಯನ್ನು ಕರೆದಿದ್ದರು.
ತಮ್ಮ ವ್ಯವಹಾರವನ್ನು ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಪರವಾನಿಗೆ ಪಡೆದ ಮೈಕ್ರೋ ಫೈನಾನ್ಸಗಳಿಂದಲೇ, ಸಾಲಗಾರ ವೃದ್ಧರು ಮತ್ತು ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಸಿದರೇ, ಜನರ ರಕ್ಷಣೆಗಾಗಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿ.ಎಂ. ಸಿದ್ಧರಾಮಯ್ಯ ಎಚ್ಚರಿಕೆಯನ್ನು ನೀಡಿದ್ದಾರೆ.
ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಸಿಎಂ ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದರು. ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿಗಳನ್ನು ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದರು.
ಇನ್ನು ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರು ತಿಳಿಸಿದರು.
ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ ಗುಡುಗಿದರು.
ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.