
ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರವನ್ನು ಸಿಎಂ ಸಿದ್ದರಾಮಯ್ಯನವರು ಮಾಡುತ್ತಿದ್ದರು. ಕೇಂದ್ರ ಸರ್ಕಾರ ಜಾತಿಗಣತಿ ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ. ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಬಹಳ ಉತ್ತಮ ನಿರ್ಧಾರ ಕೈಗೊಂಡಿದೆ. ನಿನ್ನೆಯ ಸಂಪುಟ ಸಭೆಯಲ್ಲಿ ಜನಗಣತಿ ಜೊತೆಗೆ ಜಾತಿ ಜನಗಣತಿ ಮಾಡುವ ಪ್ರಮುಖ ನಿರ್ಧಾರ ಮಾಡಿದ್ದು, ಸ್ವಾಗತಾರ್ಹ ಎಂದರು.
ಭಾರತದಲ್ಲಿ 1931ರ ನಂತರ ಯಾವತ್ತೂ ಜಾತಿ ಜನಗಣತಿ ಆಗಿರಲಿಲ್ಲ. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಬೇಕು; ಎಲ್ಲ ಸಮುದಾಯಗಳಿಗೂ ಸವಲತ್ತು ಸಿಗಬೇಕೆಂಬುದೇ ನರೇಂದ್ರ ಮೋದಿಜೀ ಅವರ ಇಚ್ಛೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ಧ್ಯೇಯೋದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.
ಜನಗಣತಿ ಜೊತೆ ಜಾತಿ ಗಣತಿ ಮಾಡುವ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷವು ಜಾತಿ-ಜಾತಿಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ಅವರಿಗೂ ಆಶ್ಚರ್ಯವಾಗಿದೆ. ಕೇಂದ್ರದಲ್ಲಿ ಸ್ವಾತಂತ್ರ್ಯಾ ನಂತರ ಇಷ್ಟು ವರ್ಷ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷವು ಜಾತಿ ಜನಗಣತಿ ಕಾರ್ಯಕ್ಕೆ ಕೈ ಹಾಕಿರಲಿಲ್ಲ ಎಂದು ಟೀಕಿಸಿದರು.