Uncategorized

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸಲು ಮುಂದಾಗಿರುವುದನ್ನು ಖಂಡಿಸಿ, ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಯ ವತಿಯಿಂದ ಬೃಹತ್ ಪ್ರತಿಭಟನೆ

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಜಮಾಯಿಸಿದ ನೂರಾರು ರೈತರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು.
ಕೇಂದ್ರ ಸರ್ಕಾರವು ದೇಶದ ಹಲವು ರಾಜ್ಯಗಳಲ್ಲಿ ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸಲು ಮುಂದಾಗುತ್ತಿರುವುದಕ್ಕೆ ಬೆಳಗಾವಿಯಲ್ಲಿ ರೈತ ಮುಖಂಡ ಚೂನಪ್ಪ ಪೂಜಾರಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಆರಂಭದಲ್ಲಿ ಜಿಯೋ ಸಿಮ್ ಮಾದರಿಯಲ್ಲಿ ಉಚಿತವಾಗಿ ನೀಡಿ, ಆನಂತರ ಭಾರಿ ಪ್ರಮಾಣದಲ್ಲಿ ದರ ಏರಿಕೆ ಮಾಡಿದಂತೆ, ಈಗ ವಿದ್ಯುತ್ ಕ್ಷೇತ್ರದಲ್ಲೂ ಸ್ಮಾರ್ಟ್ ಕಾರ್ಡ್ ಮತ್ತು ಜಿಪಿಎಸ್ ಅಳವಡಿಸಲು ಸರ್ಕಾರಗಳು ಕಳ್ಳಾಟವಾಡುತ್ತಿವೆ ಎಂದು ಆರೋಪಿಸಿದರು. ಈ ಹೊಸ ವ್ಯವಸ್ಥೆಯಿಂದಾಗಿ ಮೊಬೈಲ್‌ನಂತೆ ಹಣ ಖಾಲಿಯಾದ ತಕ್ಷಣ ಸ್ವಯಂಚಾಲಿತವಾಗಿ ವಿದ್ಯುತ್ ಸ್ಥಗಿತಗೊಳ್ಳಲಿದ್ದು, ಇದರಿಂದ ದೇಶದ ರೈತರು ಹಾಗೂ ಜನಸಾಮಾನ್ಯರು ಭಾರಿ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. ಇದೇ ವೇಳೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೇರ ಎಚ್ಚರಿಕೆ ನೀಡಿದ ರೈತ ಮುಖಂಡರು, ಸರ್ಕಾರವು ತಕ್ಷಣವೇ ಈ ವಿದ್ಯುತ್ ಖಾಸಗೀಕರಣದ ಟೆಂಡರ್ ಪ್ರಕ್ರಿಯೆಯನ್ನು ವಾಪಸ್ ಪಡೆಯಬೇಕು ಎಂದು ಕಟ್ಟುನಿಟ್ಟಾಗಿ ಆಗ್ರಹಿಸಿದರು. ಒಂದು ವೇಳೆ ಸರ್ಕಾರ ತನ್ನ ಸ್ವಾರ್ಥ ಬುದ್ಧಿಯಿಂದ ಖಾಸಗೀಕರಣದ ನಿರ್ಧಾರಕ್ಕೆ ಮುಂದಾದಲ್ಲಿ, ರಾಜ್ಯದ ಎಲ್ಲಾ ರೈತರು ಒಗ್ಗೂಡಿ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ತೀವ್ರ ಸ್ವರೂಪದ ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.
ಈ ಬೃಹತ್ ಪ್ರತಿಭಟನಾ ಧರಣಿಯಲ್ಲಿ ರೈತ ಮುಖಂಡ ಪ್ರಕಾಶ್ ನಾಯ್ಕ್ ಸೇರಿದಂತೆ ಜಿಲ್ಲೆಯ ನೂರಾರು ರೈತರು ಹಾಗೂ ಸಂಘಟನೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button