
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆಯುತ್ತಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಐವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಭದ್ರತೆ ನಿರ್ವಹಣೆ ವೈಫಲ್ಯ ಹಿನ್ನೆಲೆಯಲ್ಲಿ ಐವರು ಅಧಿಕಾರಿಗಳ ತಲೆದಂಡವಾಗಿದೆ.
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಟೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಉಪವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ನೂತನ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ನೇಮಕ: ಅಮಾನತುಗೊಂಡ ದಯಾನಂದ್ ಅವರ ಜಾಗಕ್ಕೆ ನಗರ ಪೊಲೀಸ್ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನೂತನ ಆಯುಕ್ತ ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು ಮೆಟ್ರೊಪಾಲಿಟಿಕನ್ ಟಾಸ್ಕ್ (ಬಿಎಂಟಿಎಫ್) ಎಡಿಜಿಪಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್ ಅವರನ್ನು ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಶುಕ್ರವಾರ(ಇಂದು) ಪದಗ್ರಹಣ ಮಾಡುವ ಸಾಧ್ಯತೆಯಿದೆ.
1996ನೇ ಬ್ಯಾಚ್ನ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಅವರು ಈ ಹಿಂದೆ ಎಸಿಬಿ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ, ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ, ವಿವಿಧ ಜಿಲ್ಲೆಗಳಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ 39ನೇ ಪೊಲೀಸ್ ಆಯುಕ್ತರಾಗಿ ಸಿಂಗ್ ಅವರನ್ನು ನೇಮಿಸಲಾಗಿದೆ.