ಅಬಕಾರಿ ಸಚಿವರ ಬದಲಿಸಲು ಮದ್ಯದಂಗಡಿ ಮಾಲೀಕರ ಆಗ್ರಹ!

ಬೆಂಗಳೂರು: ಅಬಕಾರಿ ಸಚಿವರನ್ನೇ ಬದಲಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿರುವ ಮದ್ಯದಂಗಡಿ ಮಾಲೀಕರು, ಇಲಾಖೆಯಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ನ.20ರಿಂದ ಅಂಗಡಿಗಳನ್ನು ಬಂದ್ ಮಾಡುವುದಾಗಿ ಸರ್ಕಾರಕ್ಕೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಗುರುಸ್ವಾಮಿ, ಅಬಕಾರಿ ಇಲಾಖೆಯಲ್ಲಿ ಲಂಚಾವತಾರಕ್ಕೆ ಎಲ್ಲೆ ಮೀರಿದ್ದು, ಸನ್ನದುದಾರರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿದೆ. ಅಧಿಕಾರಿಗಳ ವರ್ಗಾವಣೆಗೆ ಕೋಟ್ಯಂತರ ವಸೂಲಿ ಮಾಡುತ್ತಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈವರೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಮುಂಬರುವ ದಿನಗಳಲ್ಲಿ ಸಿಎಂ, ಸಚಿವರ ನಿವಾಸ ಹಾಗೂ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು. ವಿವಿಧ ಬೇಡಿಕೆಗಳನ್ನು ನ.20ರೊಳಗೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದೆ. ಒಟ್ಟಾಗಿದ್ದರೆ ಅಧಿಕಾರಿಗಳಿಗೆ ಬುದ್ಧಿ ಕಲಿಸುವ ಜತೆಗೆ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ. ಪ್ರತಿ ನಿತ್ಯ ಸರ್ಕಾರಕ್ಕೆ ಬರುತ್ತಿರುವ 125 ಕೋಟಿ ರೂ. ಆದಾಯ ಸ್ಥಗಿತವಾದರೆ ನಮ್ಮ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದರು.