ಸ್ಮಾರ್ಟ್ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ಆಗ್ರಹ; ಬೈರತಿ ಸುರೇಶ್

ಬೆಂಗಳೂರು: ಸ್ಮಾರ್ಟ್ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ – ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಬೈರತಿ ಸುರೇಶ್ ಅವರು ಇಂದು ವಿಧಾನಸೌಧದ ಕಚೇರಿಯಲ್ಲಿ ನಡೆಸಿದರು.
ಈ ವೇಳೆ, ಸ್ಮಾರ್ಟ್ ಸಿಟಿ ಅಭಿಯಾನ ಶುರುವಾದಾಗಿನಿಂದ ಇಲ್ಲಿಯವರೆಗೂ ರಾಜ್ಯದ 7 ಸ್ಮಾರ್ಟ್ ಸಿಟಿಗಳಲ್ಲಿ 6,415.51 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆದಿದ್ದು, ಪೂರ್ಣಗೊಂಡಿರುವ ಹಲವು ಕಾಮಗಾರಿಗಳು ಅಷ್ಟೊಂದು ತೃಪ್ತಿದಾಯಕವಾಗಿಲ್ಲವೆಂದು ತಿಳಿದು ಬಂದಿತ್ತು. ಆದ ಕಾರಣ ಬೆಂಗಳೂರು ಹೊರತುಪಡಿಸಿ (877.82 ಕೋಟಿ ರೂ. ಕಾಮಗಾರಿ ಬೆಂಗಳೂರು ಸ್ಮಾರ್ಟ್ ಸಿಟಿಯಲ್ಲಿ ಪೂರ್ಣ) ಇತರ 6 ಸ್ಮಾರ್ಟ್ ಸಿಟಿಗಳ ಯೋಜನೆಗಳ ಬಗ್ಗೆ ಸ್ವತಂತ್ರ ಸಂಸ್ಥೆ ಒಳಗೊಂಡಂತೆ ಸಮಿತಿ ರಚಿಸಿ ತನಿಖೆ ನಡೆಸಿ 3 ತಿಂಗಳ ಕಾಲಮಿತಿಯೊಳಗೆ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ 50:50 ಅನುಪಾತದ ಅನುದಾನದಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ. ನಡೆದಿರುವ ಕಾಮಗಾರಿಗಳಲ್ಲಿ ಬಹುತೇಕ ರಸ್ತೆ ನಿರ್ಮಾಣ, ಒಳಚರಂಡಿ, ಉದ್ಯಾನವನಗಳ ನಿರ್ಮಾಣ ಹಾಗೂ ದುರಸ್ತಿ ಕಾರ್ಯಗಳಿಗೆ ಅನುದಾನವನ್ನು ವೆಚ್ಚ ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಸಚಿವ ಬೈರತಿ ಸುರೇಶ್, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮಪಾಲು ಅನುದಾನ ಇದಾಗಿದೆ. ಇದನ್ನು ಹೆಚ್ಚಿನ ರೀತಿಯಲ್ಲಿ ಸ್ಮಾರ್ಟ್ ಶಾಲೆಗಳು, ಆಸ್ಪತ್ರೆ, ಗ್ರಂಥಾಲಯ, ಬಸ್ ನಿಲ್ದಾಣ ಸೇರಿದಂತೆ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿತ್ತು ಎಂದು ತಿಳಿಸಿದರು.